ಮಂಗಳವಾರ, ಮೇ 20, 2014

ಮೊರೆ

      'ವೇದುಸುಧೆ' ವಾರ್ಷಿಕೋತ್ಸವದ ಸಂದರ್ಭದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನನ್ನ ಈ ರಚನೆಯನ್ನು ಶ್ರೀಮತಿ ಲಲಿತಾ ರಮೇಶರವರು ಸುಶ್ರಾವ್ಯವಾಗಿ ಹಾಡಿದ್ದರು. ನೀವೂ ಕೇಳಿ:

video


ಸರಿಸಿಬಿಡು ಮೂಢಮನ ಆವರಿತ ಪೊರೆಯಾ
ತೆರೆದುಬಿಡು ಕಿಟಕಿಯನು ಒಳಬರಲಿ ಬೆಳಕು|
ರೂಢಿರಾಡಿಯಡಿ ಸಿಲುಕಿ ತೊಳಲಾಡುತಿಹೆ ನಾನು
ಕರುಣೆದೋರೈ ದೇವ ಸತ್ಪಥದಿ ಮುನ್ನಡೆಸು||

ಬಲ್ಲಿದರ ನುಡಿಕೇಳಿ ನೇರಮಾರ್ಗದಿ ನಡೆದೆ

ಬಸವಳಿದಿದೆ ಮನವು ಕಷ್ಟಗಳ ಕೋಟಲೆಗೆ |
ಅರಿಗಳಾರರ ಬಂದಿ ದಿಕ್ಕೆಟ್ಟು ಕುಳಿತಿರುವೆ
ಸದ್ಗುರುವೆ ಕೃಪೆದೋರಿ ಹಿಡಿದೆತ್ತಿ ಸಂತಯಿಸು||

ಪಂಡಿತನು ನಾನಲ್ಲ ಪಾಂಡಿತ್ಯವೆನಗಿಲ್ಲ

ಒಳಮನದ ನುಡಿಯೊಂದೆ ಆಸರೆಯು ನನಗೆಲ್ಲ|
ಹುಲುಮನುಜ ನಾನಾಗಿ ಭಾವಬಂಧಿಯು ನಾನು
ಸಮಚಿತ್ತ ಕರುಣಿಸೈ ನೆಮ್ಮದಿಯ ನೀನೀಡು||
**********************
-ಕವಿನಾಗರಾಜ್.


ಬುಧವಾರ, ಮೇ 7, 2014

ಆಹಾ, ನಾವ್ ಆಳುವವರು!

ಆಹಾ, ನಾವ್ ಆಳುವವರು
ಓಹೋ ನಾವ್ ಅಳಿಸುವವರು ||ಪ||

ಕುರ್ಚಿಯ ಕಾಲ್ಗಳನೊತ್ತುವೆವು
ತಡೆದರೆ ಕೈಯನೆ ಕಡಿಯುವೆವು|

ದೇಶವ ಪೊರೆಯುವ ಹಿರಿಗಣರು
ಖಜಾನೆ ಕೊರೆಯುವ ಹೆಗ್ಗಣರು|

ಜಾತ್ಯಾತೀತರು ಎನ್ನುವೆವು
ಜಾತೀಯತೆಯ ಬೆಳೆಸುವೆವು|

ಗಾಂಧಿಯ ನಾಮ ಜಪಿಸುವೆವು
ಬ್ರಾಂದಿಯ ಕುಡಿದು ಮಲಗುವೆವು|

ಬಿದ್ದರೆ ಪಾದವ ಹಿಡಿಯುವೆವು
ಎದ್ದರೆ ಎದೆಗೆ ಒದೆಯುವೆವು|

ಪಾದಯಾತ್ರೆಯನು ಮಾಡುವೆವು
ಕುರ್ಚಿಯ ಕನಸನು ಕಾಣುವೆವು|

ಗೆದ್ದವರನೆ ನಾವ್ ಕೊಳ್ಳುವೆವು
ಸ್ವಂತದ ಸೇವೆಯ ಮಾಡುವೆವು|

ಸಮಾಜ ಸೇವಕರೆನ್ನುವೆವು
ದೇಶವ ಹರಿದು ತಿನ್ನುವೆವು|
*********
-ಕವಿನಾಗರಾಜ್.

ಮಂಗಳವಾರ, ಮೇ 6, 2014

ಸಂಬಂಧ

ಯಾರೂ ಬೇಡವೆಂದವರು
ಯಾರಿಗೂ ಬೇಡವಾಗುವರು
ಸ್ವಹಿತವೇ ಮೇಲೆಂಬರು
ಇತರರನು ದೂರುವರು
ಮೂಲೆಗುಂಪಾಗುವರು

ಎಲ್ಲರೂ ಬೇಕೆಂಬವರೂ
ಯಾರಿಗೂ ಬೇಡವಾಗುವರು
ಅವರ ಪರವೆಂದಿವರು
ಇವರ ಪರವೆಂದವರು
ದೂರಿ ದೂಡಿಬಿಡುವರು
*********
-ಕ.ವೆಂ.ನಾಗರಾಜ್.